ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.
ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗುವಂತೆ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿ ಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.