ತಮಿಳುನಾಡು: “ಕರ್ನಾಟಕದ ಸಿಂಗಂ” ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ.
ನಿನ್ನೆ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಅರವಕುರಿಚಿ ವಿಧಾನಸಭಾ ಕ್ಷೇತ್ರವು ದ್ರಾವಿಡ್ ಮುನೇತ್ರ ಕಾಳಗಂ ಪಕ್ಷದ ಭದ್ರಕೋಟೆ ಎನಿಸಿದೆ. ಅಲ್ಪಸಂಖ್ಯಾತರ ಮತದಾರರೇ ಹೆಚ್ಚಿನ ಪ್ರಮಾಣದಲ್ಲಿರುವ ಈ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಈ ಬಾರಿ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿಯು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ಅಣ್ಣಾಮಲೈ ಅವರಿಗೆ ಟಿಕೆಟ್ ನೀಡಿದೆ.
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.