ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ.
ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ. ಸ್ಪೋರ್ಟ್ಸ್ ಕ್ಲಬ್ ಮೈದಾನದ ಪಕ್ಕದಲ್ಲಿ ರಾತ್ರಿ ಸುಮಾರು 10ರಿಂದ 10.30ರ ವೇಳೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯದಲ್ಲೇ ಆನೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಆನೆ ಹಠಾತ್ ಪ್ರತ್ಯಕ್ಷವಾಗಿದ್ದರಿಂದ ಬೈಕ್ ಸವಾರ ಗಲಿಬಿಲಿಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಕ್ಕೆ ಸಿಲುಕದೆ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯರಿಂದ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆ ಅದೇ ಪರಿಸರದಲ್ಲಿ ಇರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ಆನೆಗಳ ಸಂಚಾರದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿ, ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಮಾಹಿತಿ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.





