
ಗುಂಡ್ಯ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ.