ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಥಾವರಚಂದ್ ಗೆಹ್ಲೋಟ್ ಅವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.
ನಿರ್ಗಮಿತ ರಾಜ್ಯಪಾಲ ವಿ.ಆರ್.ವಾಲ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಆರ್.ಅಶೋಕ್ ಭಾಗವಹಿಸಿದ್ದರು.