ವಿಟ್ಲ: ವಿಟ್ಲ ಸಮೀಪದ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಗುರುವಾರ (18-06-2026) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಸಂಭವಿಸಿದ ದುರ್ಘಟನೆಯಲ್ಲಿ ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಮಹೇಶ್ ಎಂದು ಗುರುತಿಸಲಾಗಿದೆ.
ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಚಾಲಕ ಮಹೇಶ್ ಲಾರಿಯ ಕೆಳಗೆ ಇಳಿದು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದಕ್ಕೆ ಚಲಿಸಿದ ಪರಿಣಾಮ ಮಹೇಶ್ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಆಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಲಾಯಿತು
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.





