ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದಡಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನದ ನಸೀಮಾ(42) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ನ.1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ಆರೋಪಿತರಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ ಎಂಬಾಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಪೂರೈಕೆಯ ಜಾಲದ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.
ಪಂಪ್‌ವೆಲ್ ಉಜೋಡಿಯ ಹತ್ತಿರದ ರಾಧಾ ರೆಸಿಡೆನ್ಸಿ ಎಂಬ ಅಪಾರ್ಟ್‌ಮೆಂಟ್ ಕಟ್ಟಡದ ಒಂದನೇ ಮಹಡಿಯಲ್ಲಿರುವ ಫ್ಲ್ಯಾಟ್ ನಂಬ್ರ 103ರಲ್ಲಿ ಶೋಧ ನಡೆಸಿ ಸುಮಾರು 15ಲಕ್ಷದ 30ಸಾವಿರ ಮೌಲ್ಯದ 153 ಗ್ರಾಂ MDMAಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಬಂಧಿತ ನಸೀಮಾ ಮಂಗಳೂರು ನಗರದಾದ್ಯಂತ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವುದು ವಿಚಾರಣೆಯ ವೇಳೆ ತಿಳಿದು ಬಂದಿದೆ.
ನಸೀಮಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನು ಕೆಲವು ಆರೋಪಿಗಳು ಭಾಗಿಯಾಗಿದ್ದು ಅವರುಗಳ ಬಂಧನ ಬಾಕಿಯಿದೆ. ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.




