ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಹೈದರಾಬಾದ್: ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ನವದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಬಂದಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

READ ALSO

ಲೋಕೊಮೋಟಿವ್‌ನಲ್ಲಿ ಹೊಗೆ ಬರುತ್ತಿರುವುದನ್ನು ಲೋಕೊಪೈಲಟ್ ಗಮನಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ಎಂಜಿನ್‌ನ ಸ್ವಲ್ಪ ಪ್ರಮಾಣ ಆವರಿಸಿತ್ತು. ಕೂಡಲೇ ಬೋಗಿಗಳಿಂದ ಎಂಜಿನ್ ನ್ನು ಬೇರ್ಪಡಿಸಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.