ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.
ಸೇನಾ ರ‍್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲು ಸೂಕ್ತ ಸಿಬ್ಬಂದಿಯನ್ನು ನೇಮಿಸುವಂತೆ ಡಿಡಿಪಿಐ ಗೆ, ರ‍್ಯಾಲಿ ಸ್ಥಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರ ಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಡಿಪಿಐ ಎನ್.ಹೆಚ್.ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ದುಬಾಶ್ ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.