ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು.
ಐತಿಹಾಸಿಕ, ಧಾರ್ಮಿಕ ನೆಲೆಬೀಡಾದ ಹಾಗೂ ತೋಟಗಾರಿಕೆ ಬೆಳೆಗೆ ಪ್ರಸಿದ್ಧವಾದ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ಜೊತೆಗೆ ಪ್ರವಾಸೋದ್ಯಮ ಬೆಳವಣಿಗೆಗೆ, ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
ಮದಭಾವಿಯಲ್ಲಿ 727 ಎಕರೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ₹220 ಕೋಟಿ ಮೊತ್ತದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಮೊದಲ ಹಂತದಲ್ಲಿ ₹95 ಕೋಟಿ ಮೊತ್ತದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
ವಿಜಯಪುರದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ದೇವೇಂದ್ರ ಚವ್ಹಾಣ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರು, ಎಂಎಲ್ ಸಿ ಅರುಣ್ ಶಹಾಪೂರ, ಸಂಸದ ರಮೇಶ ಜಿಗಜಿಣಗಿ, ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಎಡಿಸಿ ರಮೇಶ ಕಳಸದ, ಎಎಸ್ ಪಿ ಡಾ.ರಾಮ್ ಅರಸಿದ್ದಿ ಇದ್ದರು.